ಗದಗ, ಆಗಸ್ಟ್ 12: ಮುಂಬರುವ ಸ್ಥಳೀಯ ಸಂಸ್ಥೆಗಳ ಹಾಗೂ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ನಲ್ಲಿ ಸಂಘಟನಾತ್ಮಕ ಬದಲಾವಣೆಯ ಕೂಗು ಕೇಳಿಬಂದಿದೆ. ಯುವ ನಾಯಕ ಸಚಿನ್ ಡಿ. ಪಾಟೀಲ್ ಅವರನ್ನು ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆಯ ರಾಜ್ಯ ಯುವ ಘಟಕ ಒತ್ತಾಯಿಸಿದೆ.
ರಾಜ್ಯ ಯುವ ಘಟಕದ ಅಧ್ಯಕ್ಷ ಸುರೇಶ ಬೆಳಧಡಿ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಹಾಗೂ ಸಚಿನ್ ಡಿ. ಪಾಟೀಲ್ ಅವರ ಅಭಿಮಾನಿಗಳು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕಾರ್ಯದರ್ಶಿ ಹಾಗೂ ಜಿಲ್ಲಾ ಮುಖ್ಯ ವೀಕ್ಷಕ ವಿವೇಕ್ ಬನ್ಸಾಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿರುವ ಸಚಿನ್ ಡಿ. ಪಾಟೀಲ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ, ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಅರುಣ ಬೆಳಧಡಿ ಮಾತನಾಡಿ, ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಸಾಮರ್ಥ್ಯ ಸಚಿನ್ ಡಿ. ಪಾಟೀಲ್ ಅವರಿಗಿದೆ. ಯುವ ನಾಯಕತ್ವಕ್ಕೆ ಅವಕಾಶ ನೀಡುವ ಮೂಲಕ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ನೀಡಬೇಕು ಎಂದು ಒತ್ತಾಯಿಸಿದರು.ಮನವಿ ಸಲ್ಲಿಸುವ ಸಂದರ್ಭದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತ ಕೃಷ್ಣಾ ಎಚ್. ಹಡಪದ, ಹಿರಿಯ ನಾಯಕರಾದ ಹನುಮಂತಪ್ಪ ರಾಂಪೂರ ಹಾಗೂ ರಫೀಕ್ ಅಬ್ಬಿಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು
.ಇದೇ ವೇಳೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ವಿವಿಧ ಪ್ರಗತಿಪರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಚಿನ್ ಡಿ. ಪಾಟೀಲ್ ಅವರ ಬೆಂಬಲಿಗರು ಉಪಸ್ಥಿತರಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅವರಿಗೆ ನೀಡುವಂತೆ ಒತ್ತಾಯಿಸಿದರು.ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ನಲ್ಲಿ ಸಂಘಟನಾ ಬಲವರ್ಧನೆಗೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಸಚಿನ್ ಪಾಟೀಲ್ ಪರವಾಗಿ ವ್ಯಕ್ತವಾಗಿರುವ ಈ ಬೇಡಿಕೆ ಇದೀಗ ಪಕ್ಷದೊಳಗೆ ಗಮನ ಸೆಳೆದಿದೆ.
