ಬೆಂಗಳೂರು: ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯೊಂದಿಗೆ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದ ಅಗ್ನಿಶಾಮಕ, ಶೋಧನೆ ಮತ್ತು ರಕ್ಷಣಾ ಕಾರ್ಯಗಳು, ನೈಸರ್ಗಿಕ ವಿಕೋಪಗಳಿಗೆ ತ್ವರಿತ ಸ್ಪಂದನೆ ಹಾಗೂ ವಿಪತ್ತು ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಲಪಡಿಸುವ ಕುರಿತು ಸಮಗ್ರ ಚರ್ಚೆ ನಡೆಸಿ ಹಲವು ಮಹತ್ವದ ನಿರ್ದೇಶನಗಳನ್ನು ನೀಡಲಾಗಿದೆ.ಸಭೆಯಲ್ಲಿ ರಾಜ್ಯದ 219 ಅಗ್ನಿಶಾಮಕ ಠಾಣೆಗಳ ಕಾರ್ಯನಿರ್ವಹಣೆಯ ಸ್ಥಿತಿಯನ್ನು ಪರಿಶೀಲಿಸಿ, ಅವುಗಳ ಸಮಗ್ರ ವರದಿಯನ್ನು ಶೀಘ್ರದಲ್ಲಿಯೇ ಸಲ್ಲಿಸುವಂತೆ ಸೂಚಿಸಲಾಗಿದೆ.
ಇದೇ ವೇಳೆ ಇಲಾಖೆಯಲ್ಲಿರುವ 490 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಆರ್ಥಿಕ ಇಲಾಖೆಯ ಸಮನ್ವಯದೊಂದಿಗೆ ತ್ವರಿತಗೊಳಿಸಲು ಹಾಗೂ ಸಂವಿಧಾನದ 371(ಜೆ) ನಿಯಮದಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ವಂತ ಕಟ್ಟಡವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಅಗ್ನಿಶಾಮಕ ಠಾಣೆಗಳ ಕುರಿತು ಮಾಹಿತಿ ಸಂಗ್ರಹಿಸಿ, ಅಗತ್ಯವಿರುವ ಜಿಲ್ಲೆಗಳಲ್ಲಿ ಹೊಸ ಸ್ವಂತ ಅಗ್ನಿಶಾಮಕ ಠಾಣೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಅಗ್ನಿಶಾಮಕ ಸಿಬ್ಬಂದಿಗೆ ಅಗತ್ಯವಿರುವ ನಿವಾಸ ಸೌಲಭ್ಯಗಳನ್ನು ಶೇ.50ರಷ್ಟು ಹೆಚ್ಚಿಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಇಲಾಖೆಗೆ ನಿರ್ದೇಶಿಸಲಾಗಿದೆ.ವಿಪತ್ತುಗಳ ಸಂದರ್ಭದಲ್ಲಿ ತ್ವರಿತ ಹಾಗೂ ಪರಿಣಾಮಕಾರಿ ಕಾರ್ಯಾಚರಣೆ ಅತ್ಯಂತ ಮುಖ್ಯವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಸಾಮರ್ಥ್ಯವನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಒತ್ತಿ ಹೇಳಲಾಗಿದೆ
.ಅದೇ ರೀತಿ ಗೃಹರಕ್ಷಕ ದಳದ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು, ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ತರಬೇತಿ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ವಿಸ್ತರಿಸುವಂತೆ ಸೂಚಿಸಲಾಗಿದೆ.
ಸಭೆಯ ಅಂತ್ಯದಲ್ಲಿ, ರಾಜ್ಯದ ಪ್ರತಿಯೊಬ್ಬ ನಾಗರಿಕರ ಜೀವ ಮತ್ತು ಆಸ್ತಿಯ ರಕ್ಷಣೆ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದ್ದು, ಅಗ್ನಿಶಾಮಕ, ವಿಪತ್ತು ನಿರ್ವಹಣೆ ಹಾಗೂ ಗೃಹರಕ್ಷಕ ದಳಗಳನ್ನು ಇನ್ನಷ್ಟು ಆಧುನಿಕ, ಸಬಲ ಮತ್ತು ಜನಸ್ನೇಹಿಯಾಗಿ ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಲಾಯಿತು.
