ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ನೂತನ ಸಚಿವರು ಬುಧವಾರದಿಂದಲೇ ತಮಗೆ ಜವಾಬ್ದಾರಿ ನೀಡಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿ, ಸಮಗ್ರ ವರದಿಯನ್ನು ಕಂದಾಯ ಸಚಿವರಿಗೆ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು
.ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಮುಂದಿರುವ ಸವಾಲುಗಳು, ಪ್ರಕೃತಿ ವಿಕೋಪಗಳು, ಬರ ಪರಿಸ್ಥಿತಿ ಹಾಗೂ ಕಾವೇರಿ ಜಲಾನಯನ ಪ್ರದೇಶದ ನೀರಿನ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ.
ಸದ್ಯ ಮಳೆಯಿಂದಾಗಿ ಪರಿಸ್ಥಿತಿ ಸುಧಾರಿಸಿದ್ದರೂ, ಕುಡಿಯುವ ನೀರಿನ ಭದ್ರತೆ ಮತ್ತು ಭವಿಷ್ಯದ ಸವಾಲುಗಳಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.ತಮಿಳುನಾಡಿಗೆ ನೀರು ಬಿಡುಗಡೆ ವಿಚಾರವಾಗಿ ನ್ಯಾಯಾಲಯದ ನಿರ್ದೇಶನದಂತೆ 3,500 ಕ್ಯೂಸೆಕ್ ನೀರು ಹರಿಸಬೇಕಾಗಿದ್ದರೂ, ಮಳೆಯ ಪರಿಣಾಮದಿಂದ ಸುಮಾರು 30 ಸಾವಿರ ಕ್ಯೂಸೆಕ್ ನೀರು ಹರಿದಿದೆ ಎಂದು ಮಾಹಿತಿ ನೀಡಿದರು
. ಈ ಸಂಬಂಧ ತಮಿಳುನಾಡು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಾನೂನು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.ರಾಜ್ಯದ ವಿವಿಧ ವಿಭಾಗಗಳಲ್ಲಿ ಈಗಾಗಲೇ ಪರಿಶೀಲನಾ ಸಭೆಗಳನ್ನು ನಡೆಸಲಾಗಿದ್ದು, ಮೈಸೂರು ವಿಭಾಗದ ಸಭೆಯನ್ನು ಶೀಘ್ರದಲ್ಲೇ ಆಯೋಜಿಸಲಾಗುವುದು ಎಂದು ತಿಳಿಸಿದರು
. ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.ಸಂಪುಟ ವಿಸ್ತರಣೆಯ ಕುರಿತು ಮಾತನಾಡಿದ ಮುಖ್ಯಮಂತ್ರಿ, ಈ ಬಾರಿ 19 ಹೊಸ ಸದಸ್ಯರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದ್ದು, ಅನೇಕ ಹಿರಿಯರು ಮತ್ತು ಅರ್ಹ ಶಾಸಕರು ಇದ್ದರೂ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಸಚಿವ ಸ್ಥಾನ ಸಿಗದವರು ತಾಳ್ಮೆಯಿಂದ ಇರಬೇಕು, ಪಕ್ಷ ಸೂಕ್ತ ಸಮಯದಲ್ಲಿ ಅವಕಾಶ ಕಲ್ಪಿಸುತ್ತದೆ ಎಂದು ಅವರು ತಿಳಿಸಿದರು.ರಾಜಕೀಯದಲ್ಲಿ ತಾಳ್ಮೆಯ ಮಹತ್ವವನ್ನು ವಿವರಿಸಿದ ಅವರು, ಹಿಂದಿನ ಮುಖ್ಯಮಂತ್ರಿಗಳ ಅವಧಿಯಲ್ಲೂ ಹಲವು ಹಿರಿಯ ನಾಯಕರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯದೆ ತಾಳ್ಮೆಯಿಂದ ಪಕ್ಷದೊಂದಿಗೆ ಕೆಲಸ ಮಾಡಿದ ಉದಾಹರಣೆಗಳನ್ನು ಉಲ್ಲೇಖಿಸಿದರು.
ಇದೇ ತಾಳ್ಮೆಯ ಫಲವಾಗಿ ಇಂದು ತಾವು ಮುಖ್ಯಮಂತ್ರಿಯಾಗಿದ್ದು, ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿದ್ದಾರೆ ಎಂದರು.ಸಚಿವ ಸಂಪುಟದಲ್ಲಿ ಸಂವಿಧಾನಾತ್ಮಕವಾಗಿ 33 ಸ್ಥಾನಗಳಿಗೆ ಮಾತ್ರ ಅವಕಾಶವಿದ್ದು, ಮಹಿಳೆಯರಿಗೆ ಆದ್ಯತೆ ನೀಡುವ ಪಕ್ಷದ ಬದ್ಧತೆಯಂತೆ ಶೀಘ್ರದಲ್ಲೇ ಒಬ್ಬ ಮಹಿಳೆಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.
ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದ್ದು, ಈ ವಿಷಯದಲ್ಲಿ ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಹಾಗೂ ಕರ್ನಾಟಕದ ಜನತೆ ಒಗ್ಗಟ್ಟಾಗಿ ನಿಂತಿರುವುದು ಸಂತಸದ ಸಂಗತಿ ಎಂದು ಅವರು ಹೇಳಿದರು.
